ಧಾರವಾಡ : ಪ್ರತಿ ವರ್ಷದಂತೆ ಈ ವರ್ಷವೂ ನವ್ಹೆಂಬರ ಮಾಹೆಯಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಇವರಿಂದ ರಾಷ್ಟ್ರೀಯ ದತ್ತು ಮಾಸಾಚರಣೆ ನವ್ಹೆಂಬರ-2025 ರ ಅಂಗವಾಗಿ ಕಾನೂನು ಬಧ್ಧ ದತ್ತು ಕುರಿತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ನರ್ಸಿಂಗ ಕಾಲೇಜು ವಿದ್ಯಾರ್ಥಿಗಳು, ಸ್ವ ಸಹಾಯ ಸಂಘಗಳ ಪ್ರತಿನಿಧಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆಯನ್ನು ನೀಡಲಾಗಿತ್ತು.
ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷವಾಗಿ ಜಿಲ್ಲೆಯ ಜನಪ್ರತಿನಿಧಿಗಳಿಂದ, ಚಿತ್ರನಟರು ಮತ್ತು ಜಾನಪದ ಕಲಾವಿದರಿಂದ, ಪ್ರಖ್ಯಾತ ಗಣ್ಯವ್ಯಕ್ತಿಗಳಿಂದ ಕಾನೂನು ಬದ್ಧ ದತ್ತು ಕುರಿತು ಸಂದೇಶವನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಯಿತು. ನವ್ಹೆಂಬರ ಮಾಹೆಯ ಕಾರ್ತಿಕ ಮಾಸದ ನಿಮಿತ್ತ ಜಿಲ್ಲೆಯ ದೇವಸ್ಥಾನಗಳು, ಹುಬ್ಬಳ್ಳಿ ರೇಲ್ವೆ ನಿಲ್ದಾಣ, ಹಾಗೂ ಕಛೇರಿಗಳಲ್ಲಿ ದತ್ತು ಕುರಿತು ಚಿತ್ರಗಳನ್ನು ರಂಗೋಲಿ ಮೂಲಕ ಬಿಡಿಸಿ ಪ್ರಚಾರ ಮಾಡಲಾಯಿತು. ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಿಂದ ಬೈಕ್ರ್ಯಾಲಿ, ವಾಕಥಾನ್ ಮೂಲಕ ಕಾನೂನು ಬದ್ಧ ದತ್ತು ಕುರಿತು ಹೆಚ್ಚಿನ ಪ್ರಚಾರ ಮಾಡಲಾಯಿತು.
ಗ್ರಾಮ ಪಂಚಾಯತ, ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸ ವಿಲೇವಾರಿ ವಾಹನದಲ್ಲಿ ಅಡಿಯೋ ಜಿಂಗಲ್ಸ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಯಿತು. ಆಕಾಶವಾಣಿ ಧಾರವಾಡ ಕೇಂದ್ರದಲ್ಲಿ ಕಾನೂನುಬದ್ಧವಾಗಿ ದತ್ತು ಪಡೆಯಲು ಮಾರ್ಗಸೂಚಿಗಳ ಕುರಿತು ಅರಿವು ಮೂಡಿಸಲಾಯಿತು.
ಜಿಲ್ಲೆಯ ಎಲ್ಲ ತಾಲ್ಲೂಕುಗಳ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ನರ್ಸಿಂಗ ಕಾಲೇಜು ವಿದ್ಯಾರ್ಥಿಗಳು, ಸ್ವ ಸಹಾಯ ಸಂಘಗಳ ಪ್ರತಿನಿಧಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ದತ್ತು ಮಾಸಾಚರಣೆ 2025 ರ ಅಂಗವಾಗಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ವ್ಯಾಪಕ ಪ್ರಚಾರಗಳನ್ನು ಕೈಗೊಳ್ಳಲಾಯಿತು.
ರಾಜ್ಯದಲ್ಲಿಯೇ ಎಲ್ಲ ಜಿಲ್ಲೆಗಳಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಗಮನಿಸಿದ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಅವರು ನವೆಂಬರ್ 29, 2025 ರಂದು ಬೆಂಗಳೂರಿನ ಭಾಲಭವನದಲ್ಲಿ ಹಮ್ಮಿಕೊಂಡಿದ್ದ ದತ್ತು ಪೋಷಕರ ಸಮಾವೇಶ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಕ್ಕಾಗಿ ಪ್ರಥಮ ಸ್ಥಾನ ನೀಡಿ ಗೌರವಿಸಿದೆ.
ಇದೇ ಸಂದರ್ಭದಲ್ಲಿ ಅಮೂಲ್ಯ(ಜಿ) ಶಿಶುಗೃಹ ಹುಬ್ಬಳ್ಳಿ ಸಂಸ್ಥೆಯಲ್ಲಿ ಪುಷ್ಪಾ ಉಳ್ಳಿಕಾಶಿ ಆಯಾ ಅವರನ್ನು ಮಕ್ಕಳ ಆರೈಕೆಯಲ್ಲಿ ನೀಡಿದ ಸೇವೆಯನ್ನು ಗುರುತಿಸಿ, ಸನ್ಮಾನಿಸಲಾಯಿತು. ಹಾಗೂ ದ್ವೀತಿಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದ ಹುಬ್ಬಳ್ಳಿ ಘಂಟಿಕೇರಿ ಸಂಸ್ಥೆಯ ಬಾಲಕಿಯರ ಸರ್ಕಾರಿ ಬಾಲಮಂದಿರದ ಬಾಲಕಿ ವೀಣಾ ಬಡಿಗೇರಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ(ಕಾರಾ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಮತ್ತು ಸದಸ್ಯ ಕಾರ್ಯದರ್ಶಿ ಭಾವನಾ ಸೆಕ್ಸೆನಾ, ಬೆಂಗಳೂರಿನ ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ನಿರ್ದೇಶಕ ಡಾ. ಅಶೋಕ ಡಿ. ಹಾಗೂ ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕ ಹಲೀಮಾ ಕೆ. ಅವರು ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ, ಗೌರವಿಸಿದರು.
ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಧಾರವಾಡ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಶಂಸೆಗೆ ಪಾತ್ರವಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





