
ಧಾರವಾಡ11 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕು.
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು.
ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು.
ಅಂತರ ಜಿಲ್ಲಾ ವರ್ಗಾವಣೆಯ ಕೆಸಿ ಎಸ್ ಆರ್ ನಿಯಮ 16 ಎ ರ ಉಪಖಂಡ (೨) ಮರುಸ್ಥಾಪಿಸುವ ಅಥವಾ ಇತರ ಇಲಾಖೆಗಳಲ್ಲಿ ಇರುವ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿಯನ್ನು ರಚಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.
ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ ಹಟ್ಟಿ, ತಾಲ್ಲೂಕಾ ಗಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪರಮಾನಂದ ದಡ್ಡಿಯವರ ಅವರ ನೇತೃತ್ವದಲ್ಲಿ ಆರಂಭಿಸಿದ ಮುಷ್ಕರದಲ್ಲಿ ಪ್ರವೀಣ ಕುಲಕರ್ಣಿ, ಮಹೇಶ ನಾಗಮ್ಮನವರ, ಕವಿತಾ ಬೆಂಗೇರಿ, ದೀಪಾ ಹಲಗಿ, ನೀಲಮ್ಮ ದಾಸನಕೊಪ್ಪ, ಅಶ್ವಿನಿ ಪೂಜಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮುಷ್ಕರಕ್ಕೆ ದಲಿತ ಸಂಘರ್ಷ ಸಮಿತಿಯ ಮುಖಂಡ ಲಕ್ಷ್ಮಣ ದೊಡ್ಡಮನಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಿ ಬೆಂಬಲಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಷನ್ ಗಳು ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.